S.N. Channabasappa ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಹಿನ್ನೆಲೆ, ಶಿವಮೊಗ್ಗ ನಗರದ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಶಾಸಕರ ಅಧಿಕೃತ ಕಚೇರಿಯಾದ ‘ಕರ್ತವ್ಯ ಭವನ’ದಲ್ಲಿ ಮಹಾನಗರ ಪಾಲಿಕೆ ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳೊಂದಿಗೆ ನಡೆದ ಜಂಟಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾನಗರ ಪಾಲಿಕೆ ಮತ್ತು ತುಂಗಾ ಮೇಲ್ದಂಡೆ ಯೋಜನಾ ಮಂಡಳಿಯ ನಡುವಿನ ಸಮನ್ವಯದ ಕೊರತೆಯಿಂದ ಸಾರ್ವಜನಿಕ ಕಾಮಗಾರಿಗಳಿಗೆ ಯಾವುದೇ ಅಡ್ಡಿಯಾಗಬಾರದು. ಎರಡೂ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಹಕಾರದೊಂದಿಗೆ ಕಾರ್ಯನಿರ್ವಹಿಸಿ, ಜನರಿಗೆ ತ್ವರಿತ ಸೇವೆ ಒದಗಿಸಬೇಕು ಎಂದು ಶಾಸಕರು ನಿರ್ದೇಶನ ನೀಡಿದರು.
ನಗರದ ವಿವಿಧ ಭಾಗಗಳಲ್ಲಿ ಹಾದುಹೋಗುವ ಚಾನಲ್ಗಳ ಅಭಿವೃದ್ಧಿ ಹಾಗೂ ಅವುಗಳ ನಿರಂತರ ಸ್ವಚ್ಛತೆ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಲಾಯಿತು. ಮಳೆ ನೀರಿನ ಸರಾಗ ಹರಿವು ಹಾಗೂ ನಗರ ಸ್ವಚ್ಛತೆಯನ್ನು ಕಾಪಾಡುವ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
S.N. Channabasappa ಸಭೆಯಲ್ಲಿ ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣ ಹಾಗೂ ನಗರದ ದೈನಂದಿನ ನೀರು ಪೂರೈಕೆಯ ಸ್ಥಿತಿಗತಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಚನ್ನಬಸಪ್ಪ, ಮಳೆಯ ಕೊರತೆಯಿಂದ ಉಂಟಾಗಬಹುದಾದ ಜಲಕ್ಷಾಮವನ್ನು ಎದುರಿಸಲು ವೈಜ್ಞಾನಿಕ ನೀರು ಪೂರೈಕೆ ಯೋಜನೆ ರೂಪಿಸಿ, ಅಗತ್ಯ ತಾಂತ್ರಿಕ ಹಾಗೂ ತುರ್ತು ಕ್ರಮಗಳನ್ನು ತಕ್ಷಣ ಜಾರಿಗೊಳಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರು, ಮುಖ್ಯ ಇಂಜಿನಿಯರ್ಗಳು ಹಾಗೂ ತುಂಗಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.
