ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಲವು ಪ್ರದೇಶಗಳಲ್ಲಿ ಮನೆಗಳು ಸೇರಿದಂತೆ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪ್ರಕೃತಿ ವಿಕೋಪ ನಿರ್ವಹಣೆಗೆ 24 ಗಂಟೆಗಳ ಕಂಟ್ರೋಲ್ ರೂಂ ಆರಂಭಿಸಲಾಗಿದೆ.
ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಾಗರ ತಾಲೂಕಿನ ವಿವಿಧ ಭಾಗಗಳಲ್ಲಿ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಅಧಿಕಾರಿಗಳೊಂದಿಗೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾಗರ ನಗರದ ಕತ್ತಲೆ ಬಜಾರಿನ ಜೆ.ಪಿ. ನಗರದ ನಿವಾಸಿ ಕರೀಂ ಸಾಬ್ ಅವರ ಮನೆಗೆ ಮಳೆಯಿಂದ ಹಾನಿಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಪರಿಸ್ಥಿತಿಯನ್ನು ಅವಲೋಕಿಸಿದರು. ಸಂತ್ರಸ್ತ ಕುಟುಂಬಕ್ಕೆ ಸರ್ಕಾರದ ನಿಯಮಾನುಸಾರ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಕ್ಷೇತ್ರದಲ್ಲೇ ಮೊಕ್ಕಾಂ ಹೂಡಿ ಕಾರ್ಯನಿರ್ವಹಿಸಬೇಕು ಎಂದು ತಹಶೀಲ್ದಾರ್ ಸೂಚನೆ ನೀಡಿದರು. ಹಾನಿಗೊಳಗಾದ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿ, ವರದಿ ಸಲ್ಲಿಸಿ ಪರಿಹಾರ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪ್ರಕೃತಿ ವಿಕೋಪ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ತಾಲ್ಲೂಕು ಆಡಳಿತದ ವತಿಯಿಂದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಅನ್ನು ಆರಂಭಿಸಲಾಗಿದೆ. ಸಾರ್ವಜನಿಕರು ತುರ್ತು ನೆರವಿನ ಅಗತ್ಯವಿದ್ದಲ್ಲಿ ಸಾಗರ ತಾಲ್ಲೂಕು ಕಚೇರಿಯ 08183-226074 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
