ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಶೌಚಾಲಯ ಸ್ವಚ್ಛಗೊಳಿಸಲು ಸಿಬ್ಬಂದಿ ತೆರಳಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿ ತನ್ನ ಪ್ಯಾಂಟ್‌ನ್ನೇ ಬಳಸಿ ಶೌಚಾಲಯದ ಕಿಟಕಿಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರನ್ನು ಚನ್ನಪಟ್ಟಣ ತಾಲೂಕಿನ ಹೊನ್ನಂಗರನಹಳ್ಳಿಯ ಎಚ್.ಎಂ. ಮರಿಸ್ವಾಮಿ (41) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
