Thursday, September 17, 2026
Thursday, September 17, 2026

D.K. Shivakumar ರಾಜ್ಯದ ಹಿತಕ್ಕಾಗಿ ಪಕ್ಷಾತೀತವಾಗಿ ಒಂದಾಗೋಣ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ

Date:

D.K. Shivakumar ರಾಜ್ಯದ ಹಿತಾಸಕ್ತಿ ಮತ್ತು ಜನರ ಕಲ್ಯಾಣವೇ ಎಲ್ಲರ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಪಕ್ಷ ರಾಜಕಾರಣವನ್ನು ಪಕ್ಕಕ್ಕಿಟ್ಟು ರಾಜ್ಯದ ಅಭಿವೃದ್ಧಿಗಾಗಿ ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಸಂಸದರಿಗೆ ಕರೆ ನೀಡಿದರು.

ನವದೆಹಲಿದಲ್ಲಿ ನಡೆದ ಕರ್ನಾಟಕ ರಾಜ್ಯದ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮುಂದೆ ಬಾಕಿ ಉಳಿದಿರುವ ರಾಜ್ಯದ ವಿವಿಧ ಯೋಜನೆಗಳಿಗೆ ಶೀಘ್ರ ಅನುಮೋದನೆ ದೊರಕಿಸುವಲ್ಲಿ ಎಲ್ಲ ಸಂಸದರ ಸಹಕಾರ ಅಗತ್ಯವಾಗಿದೆ ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಎದುರಾಗುತ್ತಿರುವ ತೀವ್ರ ಬರ ಪರಿಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ ಮುಖ್ಯಮಂತ್ರಿ, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಈ ವರ್ಷದ ಮಳೆ ಕೊರತೆ ಹಾಗೂ ಬರದ ಸಾಧ್ಯತೆ ಕುರಿತು ಚರ್ಚೆ ನಡೆದಿರುವುದಾಗಿ ತಿಳಿಸಿದರು. ಆಲಮಟ್ಟಿ ಮತ್ತು ಹಾರಂಗಿ ಜಲಾಶಯಗಳನ್ನು ಹೊರತುಪಡಿಸಿ ಉಳಿದ ಬಹುತೇಕ ಜಲಾಶಯಗಳು ಖಾಲಿಯಾಗಿದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಈ ಸಂಬಂಧ ಪ್ರಧಾನಿಗೆ ಪತ್ರ ಬರೆದು ಅಗತ್ಯ ನೆರವು ಕೋರಲಾಗಿದ್ದು, ರಾಜ್ಯದ ಸಂಸದರ ಬೆಂಬಲವೂ ಅಗತ್ಯವಾಗಿದೆ ಎಂದು ತಿಳಿಸಿದರು.

ಬರದ ಹಿನ್ನೆಲೆಯಲ್ಲಿ ರೈತರು ಜಲಾಶಯಗಳಲ್ಲಿ ಲಭ್ಯವಿರುವ ನೀರಿನ ಪ್ರಮಾಣವನ್ನು ಪರಿಗಣಿಸಿ ಬೆಳೆ ಬೆಳೆಯುವಂತೆ ಮನವಿ ಮಾಡಿರುವುದಾಗಿ ಹೇಳಿದ ಅವರು, ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ತುಂಗಭದ್ರಾ ಯೋಜನೆ ಕುರಿತು ಮಾತನಾಡಿದ ಮುಖ್ಯಮಂತ್ರಿ, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಸಮ್ಮುಖದಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿರುವುದಾಗಿ ಹೇಳಿದರು. ತುಂಗಭದ್ರಾದಲ್ಲಿ ಸುಮಾರು 30 ಟಿಎಂಸಿ ನೀರು ಸಂರಕ್ಷಿಸುವ ಉದ್ದೇಶದಿಂದ ನವಿಲೆ ಸಮತೋಲನ ಜಲಾಶಯ ನಿರ್ಮಾಣಕ್ಕೆ ಮೂರು ರಾಜ್ಯಗಳೂ ಒಪ್ಪಿಗೆ ಸೂಚಿಸಿದ್ದು, ಗೋದಾವರಿ, ಕೃಷ್ಣಾ, ಪೆನ್ನಾರ್ ಹಾಗೂ ಕಾವೇರಿ ನದಿಗಳ ಜೋಡಣೆ ಯೋಜನೆಗೂ ಸಮ್ಮತಿ ವ್ಯಕ್ತವಾಗಿದೆ ಎಂದು ತಿಳಿಸಿದರು. ಇದು ಐತಿಹಾಸಿಕ ನಿರ್ಧಾರವಾಗಿದೆ ಎಂದ ಅವರು, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರನ್ನು ಭೇಟಿ ಮಾಡುವ ಸಾಧ್ಯತೆಯೂ ಇದೆ ಎಂದು ಹೇಳಿದರು.

D.K. Shivakumar ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕದ ಪರವಾಗಿ ಮಹತ್ವದ ಸ್ಪಷ್ಟನೆ ನೀಡಿದೆ ಎಂದು ಮುಖ್ಯಮಂತ್ರಿ ಹೇಳಿದರು. ಕರ್ನಾಟಕದ ವ್ಯಾಪ್ತಿಯಲ್ಲಿ ಸಮತೋಲನ ಅಣೆಕಟ್ಟು ನಿರ್ಮಿಸಲು ಬೇರೆ ರಾಜ್ಯಗಳ ಅನುಮತಿ ಅಗತ್ಯವಿಲ್ಲ ಹಾಗೂ ಆಕ್ಷೇಪಿಸುವ ಹಕ್ಕೂ ಇಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ವಿವರಿಸಿದರು. ಇದೇ ವಿಷಯವನ್ನು ರಾಜ್ಯಸಭೆಯಲ್ಲಿ ಕೇಂದ್ರ ಜಲಶಕ್ತಿ ಸಚಿವರೂ ಪುನರುಚ್ಚರಿಸಿದ್ದು, ಇದಕ್ಕಾಗಿ ಕರ್ನಾಟಕದ ಪರವಾಗಿ ಧನ್ಯವಾದ ಸಲ್ಲಿಸಿದರು.

ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ನೀರು ಹಂಚಿಕೆ ತೀರ್ಮಾನಕ್ಕೆ ಸಂಬಂಧಿಸಿದ ಗೆಜೆಟ್ ಅಧಿಸೂಚನೆ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದ್ದು, ಪ್ರಕರಣದ ತ್ವರಿತ ಇತ್ಯರ್ಥಕ್ಕಾಗಿ ವಿಶೇಷ ಪೀಠ ರಚಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಮಹದಾಯಿ ಯೋಜನೆಯಲ್ಲಿರುವ ಕಾನೂನು ಅಡೆತಡೆಗಳನ್ನು ನಿವಾರಿಸಲು ಹಿರಿಯ ವಕೀಲರೊಂದಿಗೆ ಸಮಾಲೋಚನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದೇ ವೇಳೆ, ಕೇಂದ್ರದಲ್ಲಿ ಬಾಕಿ ಉಳಿದಿರುವ ಕರ್ನಾಟಕದ ಯೋಜನೆಗಳ ಮೇಲ್ವಿಚಾರಣೆ ಮತ್ತು ಸಮನ್ವಯಕ್ಕಾಗಿ ಕರ್ನಾಟಕ ಭವನದಲ್ಲಿ ಹೊಸ ಆಡಳಿತಾತ್ಮಕ ವ್ಯವಸ್ಥೆ ಜಾರಿಗೆ ತರಲಾಗುವುದು. ಯೋಜನೆಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಲು ಪ್ರತ್ಯೇಕ ರೆಸಿಡೆಂಟ್ ಕಮಿಷನರ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...