ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಅಪರೂಪದ ರಾಜಕೀಯ ದೃಶ್ಯವೊಂದು ಕಂಡುಬಂದಿದೆ.
ಮಾಜಿ ಮುಖ್ಯಮಂತ್ರಿಗಳ ಪುತ್ರರಾದ ಸಚಿವ ಮಧು ಬಂಗಾರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
ಶಿಕಾರಿಪುರ ತಾಲೂಕು ಕಚೇರಿಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಹಾಗೂ ತಾಲೂಕಿನಲ್ಲಿ ಉಂಟಾಗಿರುವ ಅತಿವೃಷ್ಟಿ ಮತ್ತು ಅನಾವೃಷ್ಟಿ ಕುರಿತು ಸಭೆ ನಡೆಸಲಾಯಿತು.
ತಾಲೂಕು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮತ್ತು ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿ, ತಾಲೂಕಿನಲ್ಲಿ ಎದುರಾಗಿರುವ ಬರ ಹಾಗೂ ಮಳೆ ಸಂಬಂಧಿತ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.
ಶಿವಮೊಗ್ಗ ಜಿಲ್ಲಾ ಬರ ವೀಕ್ಷಣೆಯ ಉಸ್ತುವಾರಿ ಸಚಿವರಾಗಿರುವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಂದ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡರು.
ಇದೇ ವೇಳೆ, ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಬಿ.ವೈ. ವಿಜಯೇಂದ್ರ ಅವರು ತಮ್ಮ ಕ್ಷೇತ್ರದಲ್ಲಿನ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಗಮನ ಸೆಳೆದರು.
ರಾಜಕೀಯವಾಗಿ ವಿಭಿನ್ನ ಪಕ್ಷಗಳಲ್ಲಿರುವ ಇಬ್ಬರು ನಾಯಕರು ಒಂದೇ ವೇದಿಕೆಯಲ್ಲಿ ಕುಳಿತು, ತಾಲೂಕಿನ ಜನರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದು ವಿಶೇಷವಾಗಿತ್ತು.
ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪ ಹಾಗೂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರರಾದ ಮಧು ಬಂಗಾರಪ್ಪ ಮತ್ತು ಬಿ.ವೈ. ವಿಜಯೇಂದ್ರ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿರುವುದು ರಾಜಕೀಯ ವಲಯದಲ್ಲೂ ಗಮನ ಸೆಳೆದಿದೆ.
