ಭದ್ರಾವತಿ ತಾಲ್ಲೂಕಿನ ಅಂತರಗಂಗೆಯ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ವಿಭಾಗ, ಅಂತರಗಂಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ದಿನಾಂಕ 09-09-2026ರ ಬುಧವಾರದಂದು ವಿದ್ಯಾಲಯದ ಆವರಣದಲ್ಲಿ ಸಂವಿಧಾನ ಶಿಲ್ಪಿ “ಅಂಬೇಡ್ಕರ್ ಓದು” ವಿಶೇಷ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಸಿ.ಬಿ.ಸಿ. ಅಧ್ಯಕ್ಷರಾದ ಗಂಗಾಧರ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ ನೆರವೇರಿಸಿದರು.
ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಡಾ. ಸಾಸ್ವೇಹಳ್ಳಿ ಸತೀಶ್ ಅವರು ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಜೀವನ, ವಿಚಾರಧಾರೆಗಳು ಹಾಗೂ ಚಿಂತನೆಗಳ ಕುರಿತು ಸವಿಸ್ತಾರವಾಗಿ ತಿಳಿಸಿಕೊಟ್ಟರು.
ಕಾರ್ಯಕ್ರಮದಲ್ಲಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಎಲ್ಲರನ್ನೂ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಚಾರ್ಯರಾದ ಸತೀಶ್ ಎಂ. ಹಾಗೂ ಸಿಬಿಸಿ ಸದಸ್ಯರಾದ ರಾಮಾಚಾರ್ ಅವರು ಉಪಸ್ಥಿತರಿದ್ದರು.
ಸಭೆಯ ಆರಂಭದಲ್ಲಿ ತಮಟೆ ಜಗದೀಶ್ ಹಾಗೂ ಅವರ ತಂಡದ ತರಬೇತಿ ಪಡೆದ ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಕುರಿತಾದ ಕ್ರಾಂತಿಗೀತೆಗಳನ್ನು ಪ್ರಸ್ತುತಪಡಿಸಿದರು. ನಂತರ ವಿದ್ಯಾರ್ಥಿಗಳಿಂದ ನಾಡಗೀತೆ ಗಾಯನ ಹಾಗೂ ಸಂವಿಧಾನದ ಪೀಠಿಕೆಯ ಬೋಧನೆ ನಡೆಯಿತು. ಇದೇ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಇಲಾಖೆಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಭದ್ರಾವತಿ ಅಂತರಗಂಗೆ ಕೆಪಿಎಸ್ ಕಾಲೇಜಿನಲ್ಲಿ “ಅಂಬೇಡ್ಕರ್ ಓದು” ಕಾರ್ಯಕ್ರಮ
Date:
