ಹಬ್ಬಗಳು ನಮ್ಮ ಸಂಸ್ಕೃತಿಯನ್ನು ಬೆಳೆಸಿ, ಉಳಿಸುವುದರ ಜೊತೆಗೆ ಪರಸ್ಪರ ಬಾಂಧವ್ಯವನ್ನು ವೃದ್ಧಿಸುತ್ತವೆ. ಅಲ್ಲದೆ, ಜೀವನದಲ್ಲಿ ಹೊಸ ಉತ್ಸಾಹ ಮತ್ತು ಸಂತಸವನ್ನು ಮೂಡಿಸುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅಭಿಪ್ರಾಯಪಟ್ಟರು.
ಅವರು ತಮ್ಮ ನಿವಾಸದಲ್ಲಿ ಸಂಪ್ರದಾಯಬದ್ಧವಾಗಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಮಾತನಾಡಿದ ಅವರು, ಗೌರಿ-ಗಣೇಶ ಹಬ್ಬಗಳು ಒಟ್ಟಿಗೆ ಬಂದಿರುವುದು ಎಲ್ಲರಿಗೂ ಸಂತಸ ತಂದಿದೆ. ಹಿಂದೂಗಳ ಪಾಲಿಗೆ ಅತ್ಯಂತ ವಿಶೇಷವಾದ ಗಣೇಶ ಹಬ್ಬವನ್ನು ಇಂದು ದೇಶಾದ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ಇತರರ ಭಾವನೆಗಳಿಗೆ ಧಕ್ಕೆ ಉಂಟಾಗದಂತೆ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಹಬ್ಬಗಳ ಆಚರಣೆಯಿಂದ ಮನಸ್ಸಿಗೆ ನೆಮ್ಮದಿ ಹಾಗೂ ಸಂತೋಷ ದೊರೆಯುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರತಿಭಾ ಅರುಣ್ ಮಾತನಾಡಿ, ಪ್ರತಿ ವರ್ಷ ನೈಸರ್ಗಿಕವಾಗಿ ತಯಾರಿಸಲಾದ ಪರಿಸರ ಸ್ನೇಹಿ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸುವ ಮೂಲಕ ಹಬ್ಬವನ್ನು ಆಚರಿಸುತ್ತಿದ್ದೇವೆ. ಇದೇ ರೀತಿ ಎಲ್ಲರೂ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಮಾಲಿನ್ಯವನ್ನು ತಡೆಯಲು ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅಂಬೆಗಾಲು ತಂಡದ ಸದಸ್ಯರು, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ. ವಿಜಯಕುಮಾರ್, ಖಜಾಂಚಿ ಆರ್. ಮನೋಹರ್, ಡಿ.ಎಸ್. ಅರುಣ್ ಅವರ ಕುಟುಂಬ ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
