ಅತ್ಯಂತ ಕಡಿಮೆ ದರದಲ್ಲಿ ಹೆಚ್ಚಿನ ಸಂಖ್ಯೆಯ ಸರ್ಕಾರಿ ನೌಕರರಿಗೆ ನಿವೇಶನಗಳನ್ನು ಒದಗಿಸುವ ಮೂಲಕ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಗಮನಾರ್ಹ ಸಾಧನೆ ಮಾಡಿದೆ. ನೌಕರರ ವಸತಿ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಸಂಘ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಂದೆಯೂ ಈ ಸೇವೆ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಹಾಗೂ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು.
ನಗರದ ಕೆ.ಇ.ಬಿ. ವೃತ್ತದಲ್ಲಿರುವ ನಿರ್ಮಾಣ ಹಂತದ ನೌಕರರ ಸಂಘದ ನೂತನ ಸಭಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರ ಸಂಘಗಳ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ಗೃಹ ನಿರ್ಮಾಣ ಸಹಕಾರ ಸಂಘವು ರೂ.81.87 ಲಕ್ಷ ನಿವ್ವಳ ಲಾಭ ಗಳಿಸಿದೆ. ಮುಂದಿನ ದಿನಗಳಲ್ಲಿ ನೌಕರರ ಕಲ್ಯಾಣಕ್ಕಾಗಿ ಹಲವು ವಿನೂತನ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ಷಡಾಕ್ಷರಿ ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಆರ್. ಮೋಹನ್ ಕುಮಾರ್ ಮಾತನಾಡಿ, ಸಂಘವು ಸದಸ್ಯರಿಗೆ ಕಡಿಮೆ ಬಡ್ಡಿದರದಲ್ಲಿ ಹಾಗೂ ಸರಳ ದಾಖಲಾತಿಗಳೊಂದಿಗೆ ತ್ವರಿತವಾಗಿ ಸಾಲ ಸೌಲಭ್ಯ ಒದಗಿಸುತ್ತಿದೆ. ಇದರಿಂದ ಸಾವಿರಾರು ನೌಕರರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ದೊರೆತಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ಸಂಘವು ರೂ.65 ಕೋಟಿಗೂ ಅಧಿಕ ವಹಿವಾಟು ನಡೆಸಿದ್ದು, ರೂ.1.64 ಕೋಟಿ ನಿವ್ವಳ ಲಾಭ ಗಳಿಸಿದೆ. ಹೌಸಿಂಗ್ ಲೋನ್ ಸೇರಿದಂತೆ ವಿವಿಧ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಫಿಕ್ಸೆಡ್ ಡೆಪಾಸಿಟ್ಗಳಿಗೂ ಆಕರ್ಷಕ ಬಡ್ಡಿದರ ನೀಡಲಾಗುತ್ತಿದೆ. ಸಂಘದ ಆಡಳಿತದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಇದುವರೆಗೆ ನಿಧಿಗೆ, ತೇವರಚಟ್ನಳ್ಳಿ, ಸೋಮಿನಕೊಪ್ಪ ಹಾಗೂ ಮತ್ತೋಡಿ ಸೇರಿದಂತೆ ವಿವಿಧೆಡೆ ಸುಸಜ್ಜಿತ ಬಡಾವಣೆಗಳನ್ನು ನಿರ್ಮಿಸಿ ನೌಕರರಿಗೆ ನಿವೇಶನ ಹಂಚಿಕೆ ಮಾಡಲಾಗಿದೆ. ಹಲವರು ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವುದು ಸಂತಸದ ಸಂಗತಿ ಎಂದರು.
ಕಾರ್ಯಕ್ರಮದಲ್ಲಿ ಸಹಕಾರ ಮಹಾಮಂಡಲದ ಉಪಾಧ್ಯಕ್ಷ ಬಿ.ಕೆ. ಶಿವಕುಮಾರ್ ಅವರು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ ಸರ್ಕಾರಿ ನೌಕರರಿಗೆ ಎಲ್ಲ ರೀತಿಯ ಕಾಯಿಲೆಗಳಿಗೂ ಚಿಕಿತ್ಸೆ ದೊರೆಯುವಂತೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಸರ್ಜಿ ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರಿಗೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಾ. ಧನಂಜಯ ಸರ್ಜಿ, ಕ್ಯಾಷ್ಲೆಸ್ ಯೋಜನೆಯಡಿ ನಿಯಮಾನುಸಾರ ಸರ್ಕಾರಿ ನೌಕರರಿಗೆ ಚಿಕಿತ್ಸೆ ದೊರೆಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಶ್ರೀಕಾಂತ್ ಮಾತನಾಡಿ, ಸರ್ಕಾರಿ ನೌಕರರ ಸಂಘ, ನೌಕರರ ಸೌಹಾರ್ದ ಸಹಕಾರಿ ಸಂಘ ಹಾಗೂ ಗೃಹ ನಿರ್ಮಾಣ ಸಹಕಾರ ಸಂಘಗಳು ಸಿ.ಎಸ್. ಷಡಾಕ್ಷರಿ ಹಾಗೂ ಆರ್. ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಉತ್ತಮವಾಗಿ ಮುನ್ನಡೆಯುತ್ತಿವೆ. ಅವರ ಬದ್ಧತೆ ಮತ್ತು ನಿಸ್ವಾರ್ಥ ಸೇವಾ ಮನೋಭಾವವೇ ಸಂಘಗಳ ಪ್ರಗತಿಗೆ ಕಾರಣವಾಗಿದೆ ಎಂದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಮಾತನಾಡಿ, ಯಾವುದೇ ಸಂಘ-ಸಂಸ್ಥೆಯ ಅಭಿವೃದ್ಧಿ ಒಬ್ಬ ವ್ಯಕ್ತಿಯಿಂದ ಮಾತ್ರ ಸಾಧ್ಯವಿಲ್ಲ. ಪದಾಧಿಕಾರಿಗಳು ಹಾಗೂ ಸದಸ್ಯರ ಸಹಕಾರವೂ ಮುಖ್ಯವಾಗಿದೆ. ಸಹಕಾರಿ ಸಂಘವನ್ನು ಆರಂಭಿಸುವ ಸಂದರ್ಭದಲ್ಲಿ ಶೂನ್ಯ ಬಂಡವಾಳದ ನಡುವೆಯೂ ನಂಬಿಕೆ ಇಟ್ಟು ರೂ.5 ಕೋಟಿ ಸಾಲ ನೀಡಿದ ಡಿಸಿಸಿ ಬ್ಯಾಂಕ್ನ ಸಹಕಾರವನ್ನು ಸ್ಮರಿಸಿದರು.
ಗೃಹ ನಿರ್ಮಾಣ ಸಹಕಾರ ಸಂಘದ ಮೂಲಕ ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಯಲ್ಲಿ ಸಾವಿರಾರು ನಿವೇಶನಗಳನ್ನು ಹಂಚಿಕೆ ಮಾಡಿರುವುದು ಹೆಮ್ಮೆಯ ಸಂಗತಿ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯ ನಿವೇಶನಗಳನ್ನು ಹಂಚಿಕೆ ಮಾಡಿದ ಸಂಘವಾಗಿ ಇದು ಗುರುತಿಸಿಕೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಸಾಧನೆಗೆ ಪ್ರೋತ್ಸಾಹ ನೀಡುವ ಮೂಲಕ ಅವರ ಮುಂದಿನ ಶೈಕ್ಷಣಿಕ ಪಯಣಕ್ಕೆ ಶುಭ ಹಾರೈಸಲಾಯಿತು.
ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ, ಸೂಡಾ ಆಯುಕ್ತ ಮಂಜುನಾಥ, ಭೋವಿ ನಿಗಮದ ಮಾಜಿ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಪ್ರಮುಖ ಗಣ್ಯರು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸರ್ಕಾರಿ ನೌಕರರ ಸಂಘ, ನೌಕರರ ಸೌಹಾರ್ದ ಸಹಕಾರಿ ಸಂಘ ಹಾಗೂ ಗೃಹ ನಿರ್ಮಾಣ ಸಹಕಾರ ಸಂಘಗಳ ಅಭಿವೃದ್ಧಿಯಲ್ಲಿ ಸಿ.ಎಸ್. ಷಡಾಕ್ಷರಿ ಅವರ ಪಾತ್ರ ಪ್ರಮುಖವಾಗಿದೆ. ನೌಕರರ ಬಗ್ಗೆ ಅವರ ಕಾಳಜಿ ಮತ್ತು ಬದ್ಧತೆಯಿಂದ ಸಂಘಗಳು ಉತ್ತಮವಾಗಿ ಮುನ್ನಡೆಯುತ್ತಿವೆ ಎಂದು ಆರ್.ಎಂ. ಮಂಜುನಾಥ ಗೌಡ ಅಭಿಪ್ರಾಯಪಟ್ಟರು.
ಸಂಘದ ಸದಸ್ಯರ ಹಿತಾಸಕ್ತಿ, ಸಂಘದ ಅಭಿವೃದ್ಧಿ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರೋತ್ಸಾಹಕ್ಕೆ ಆದ್ಯತೆ ನೀಡುವ ಸಂಕಲ್ಪದೊಂದಿಗೆ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
