ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಧು ಎಚ್.ಎಂ. ಸೂಚಿಸಿದರು.
ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಸಮರ್ಪಕವಾಗಿ ಜಮೆಯಾಗುವಂತೆ ನೋಡಿಕೊಳ್ಳಬೇಕು. ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಬೇಕು. ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತನೆಯಾಗಿರುವ ಫಲಾನುಭವಿಗಳ ಅರ್ಹತೆಯನ್ನು ಪರಿಶೀಲಿಸಿ, ಅರ್ಹ ಬಡವರಿಗೆ ಯೋಜನೆಯ ಸೌಲಭ್ಯ ದೊರೆಯುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಗೃಹಜ್ಯೋತಿ ಯೋಜನೆಯಡಿ ಶೇ.97ರಷ್ಟು ಮರುಪರಿಶೀಲನೆ ಪ್ರಗತಿ ಸಾಧಿಸಲಾಗಿದ್ದು, ಹೊಸದಾಗಿ ನೋಂದಾಯಿಸಿಕೊಂಡ ಫಲಾನುಭವಿಗಳಿಗೂ ಯೋಜನೆಯ ಸೌಲಭ್ಯ ಸಮರ್ಪಕವಾಗಿ ತಲುಪಿಸುವಂತೆ ತಿಳಿಸಲಾಯಿತು.
ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನಿರಂತರವಾಗಿ ವಿದ್ಯುತ್ ಕಡಿತ ಮಾಡುವ ಸಂದರ್ಭ ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಬೇಕು. ಮಧ್ಯವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡುವಂತೆ ಸೂಚಿಸಲಾಯಿತು.
ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ 70 ಕಿ.ಮೀ. ಪ್ರಯಾಣ ಮಿತಿಯಲ್ಲಿ ಬಸ್‌ಪಾಸ್ ವಿತರಿಸಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು. ಪರೀಕ್ಷಾ ದಿನಗಳಲ್ಲಿ ನಿಗದಿತ ವೇಳಾಪಟ್ಟಿಯಂತೆ ಬಸ್‌ಗಳ ಸಂಚಾರ ಖಚಿತಪಡಿಸಬೇಕು. ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ಗಳ ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು.
ಸರ್ಕಾರದ ಆದೇಶದಂತೆ ಮಹಾನಗರ ಪಾಲಿಕೆ ವಾರ್ಡ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರು ಸದಸ್ಯರನ್ನೊಳಗೊಂಡ ಗ್ಯಾರಂಟಿ ಸಮಿತಿಗಳನ್ನು ರಚಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಆರ್. ಶಿವಣ್ಣ ಹಾಗೂ ಸದಸ್ಯ ಕಾರ್ಯದರ್ಶಿ ಪರಮೇಶ್ ಉಪಸ್ಥಿತರಿದ್ದರು.
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸೂಚನೆ : ಹೆಚ್ ಎಂ.ಮಧು
Date:
