ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಮರ್ಪಕವಾಗಿ ಜಮೆಯಾಗುವಂತೆ ಕ್ರಮ ಕೈಗೊಳ್ಳಬೇಕು. ಯೋಜನೆಯ ಅನರ್ಹ ಫಲಾನುಭವಿಗಳನ್ನು ಫಲಾನುಭವಿ ಪಟ್ಟಿಯಿಂದ ರದ್ದುಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಾಲೂಕು ಮಟ್ಟದ ಗ್ರಾಮೀಣ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಧು ಹೆಚ್.ಎಂ. ಹೇಳಿದರು.
ಗೃಹಲಕ್ಷ್ಮಿ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ನಿಂದ ಎಪಿಎಲ್ ಕಾರ್ಡ್ಗೆ ಪರಿವರ್ತನೆಯಾಗಿರುವ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ, ಅರ್ಹರನ್ನು ಗುರುತಿಸಿ ಬಡವರಿಗೆ ನ್ಯಾಯ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮಜ್ಯೋತಿ ಯೋಜನೆಯಡಿ ಶೇ.97ರಷ್ಟು ಮರುಪರಿಶೀಲನೆಯ ಪ್ರಗತಿ ಸಾಧಿಸಲಾಗಿದೆ. ಹೊಸದಾಗಿ ನೋಂದಾಯಿಸಿಕೊಂಡ ಫಲಾನುಭವಿಗಳಿಗೆ ಗ್ರಾಮಜ್ಯೋತಿ ಯೋಜನೆಯ ಸೌಲಭ್ಯ ಸಮರ್ಪಕವಾಗಿ ತಲುಪಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಹೆಚ್ಚು ಗಂಟೆಗಳ ಕಾಲ ಹಾಗೂ ನಿರಂತರವಾಗಿ ವಿದ್ಯುತ್ ಕಡಿತಗೊಳಿಸುವ ಮುನ್ನ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಂಚಿತವಾಗಿ ಮಾಹಿತಿ ನೀಡಬೇಕು. ಈ ಸಂಬಂಧ ಇಲಾಖೆಯ ವತಿಯಿಂದ ಅಗತ್ಯ ಮಾಹಿತಿ ಹಾಗೂ ಪತ್ರಿಕಾ ಪ್ರಕಟಣೆ ಹೊರಡಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಮಧ್ಯಾವಧಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ವಿದ್ಯುತ್ನ್ನು ಸಮರ್ಪಕವಾಗಿ ನೀಡಬೇಕು ಎಂದ ಮಧು, ವಿದ್ಯಾರ್ಥಿಗಳ ಪರೀಕ್ಷಾ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಶಕ್ತಿ ಯೋಜನೆಯಡಿ ವಿದ್ಯಾರ್ಥಿಗಳಿಗೆ 70 ಕಿ.ಮೀ. ಪ್ರಯಾಣದ ಮಿತಿಯಲ್ಲಿ ಸಂಚರಿಸಲು ಬಸ್ಪಾಸ್ ವಿತರಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾವಧಿ ಪರೀಕ್ಷೆಗಳು ಇರುವುದರಿಂದ ಅವರಿಗೆ ತೊಂದರೆಯಾಗದಂತೆ ನಿಗದಿತ ಸಮಯದ ವೇಳಾಪಟ್ಟಿಯಂತೆ ಬಸ್ಗಳು ಸಂಚರಿಸಬೇಕು. ಮಹಿಳೆಯರು ಮತ್ತು ವಿದ್ಯಾರ್ಥಿಗಳು ಹೆಚ್ಚಾಗಿರುವ ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಬಸ್ಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಆದೇಶದಂತೆ ಹೊಸದಾಗಿ ಮಹಾನಗರ ಪಾಲಿಕೆ ವ್ಯಾಪ್ತಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರು ಸದಸ್ಯರನ್ನು ಒಳಗೊಂಡ ಗ್ರಂಥಾಲಯ ಸಮಿತಿಗಳನ್ನು ರಚಿಸಬೇಕು. ಇದರಲ್ಲಿ ಎಸ್ಸಿ/ಎಸ್ಟಿ, ಅಲ್ಪಸಂಖ್ಯಾತರು, ಮಹಿಳಾ ಮೀಸಲು, ಇತರೆ ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಸದಸ್ಯರಿಗೆ ಅವಕಾಶ ಕಲ್ಪಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ರಾಮೀಣ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಆರ್. ಶಿವಣ್ಣ, ತಾಲೂಕು ಮಟ್ಟದ ಗ್ರಾಮೀಣ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಕಾರ್ಯದರ್ಶಿ ಪರಮೇಶ್ವರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
