ದೈಹಿಕ ಶಿಕ್ಷಕರೇ ಇಲ್ಲದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ವಾಲಿಬಾಲ್ ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಜಯನಗರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಾದ ಸಮೃದ್ಧ್ ಎನ್. ಶೆಟ್ಟಿ, ನಾಗೇಂದ್ರ ಹಾಗೂ ಅಫ್ನಾನ್ ಅವರು ಕರ್ನಾಟಕ ವಾಲಿಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ರಿಪ್ಪನ್ಪೇಟೆ ಶಾಲೆಯ ವಿದ್ಯಾರ್ಥಿ ತನ್ಮಯ್ ಕೂಡ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದು ಸಂತಸಕ್ಕೆ ಕಾರಣವಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಯಿಂದ ಹರ್ಷಗೊಂಡ ಗ್ರಾಮಸ್ಥರು, ಆಯ್ಕೆಯಾದ ವಿದ್ಯಾರ್ಥಿಗಳನ್ನು ಮೆರವಣಿಗೆಯ ಮೂಲಕ ಸ್ವಾಗತಿಸಿ, ಸನ್ಮಾನಿಸಿ ಗೌರವಿಸಿದರು. ಗ್ರಾಮದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು.
ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ದೊರೆತರೆ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳೂ ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬಲ್ಲರು ಎಂಬುದಕ್ಕೆ ಈ ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
