ಅಂತರ್ಜಲ ಮಟ್ಟ ಎಲ್ಲೆಡೆ ಕುಸಿಯುತ್ತಿದ್ದು, ಮೇಲ್ಮೈ ನೀರಿನಿಂದ ಗ್ರಾಮೀಣ ಪ್ರದೇಶಗಳಿಗೆ ನೀರು ಪೂರೈಕೆ ಮಾಡಲು ಬಹುಗ್ರಾಮ ಕುಡಿಯುವ ನೀರು ಯೋಜನೆ ಮತ್ತು ಏಕ ಗ್ರಾಮ ಕುಡಿಯುವ ನೀರು ಯೋಜನೆಗೆ 67 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ನಗರದ ಅಂಬೇಡ್ಕರ್ ಭವನದಲ್ಲಿಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಏಕಗ್ರಾಮ ಕುಡಿಯುವ ನೀರು ಯೋಜನೆಯು ಶೇ.80ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯು ಶೇ.40ರಷ್ಟು ಕಾಮಗಾರಿ ಇನ್ನೂ ಆಗಬೇಕಾಗಿದೆ. ಈ ಎಲ್ಲ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಮುಗಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಸೂಚಿಸಿದರು.
ಎಲ್ಲ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಸಲು ಸಾಧ್ಯವಾಗುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಅವರು, ನೀರು ಲಭ್ಯವಿಲ್ಲದ ಗ್ರಾಮಗಳಲ್ಲಿ ಖಾಸಗಿ ಬೋರ್ ವೆಲ್ ಬಾಡಿಗೆಗೆ ಪಡೆದು ಅಥವಾ ಪರ್ಯಾಯ ಜಲ ಮೂಲದಿಂದ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಸೂಚನೆ ನೀಡಿದರು.
ಈ ರೀತಿ ನೀರು ಪೂರೈಕೆ ಮಾಡುವ ಟ್ಯಾಂಕರ್ ಮಾಲೀಕರಿಗೆ ಸಕಾಲದಲ್ಲಿ ಹಣ ಪಾವತಿ ಮಾಡಬೇಕು. ತಿಂಗಳುಗಟ್ಟಲೆ ಅವರಿಗೆ ಹಣ ಪಾವತಿಸದಿದ್ದರೆ ಅವರು ಟ್ಯಾಂಕರ್ ನೀಡುವುದಿಲ್ಲ. ಇದರಿಂದ ಜನರಿಗೆ ಅನಗತ್ಯ ತೊಂದರೆ ಆಗಲಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ತಿಳಿಸಿದರು.
ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಗ್ರಾಮೀಣ ನೀರು ಪೂರೈಕೆಗೆ ಸಾಕಷ್ಟು ಹಣವಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಹಣ ಬಳಕೆ ಆಗಿರುವುದು ಕಂಡುಬಂದಿರುವುದಿಲ್ಲ. ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆಯೋ ಅಲ್ಲಿ ಕೊಳವೆ ಬಾವಿ ಕೊರೆಸಲು ಕ್ರಮ ವಹಿಸುವಂತೆ ಸೂಚಿಸಿದ ಸಚಿವರು, ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಈಗಿನಿಂದಲೇ ಕ್ರಮ ವಹಿಸುವಂತೆಯೂ ತಿಳಿಸಿದರು.
ಅರಣ್ಯ ಸಮಸ್ಯೆ ಪರಿಹರಿಸಲು ಕ್ರಮ:
ಕೆಲವು ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಮತ್ತು ಏಕಗ್ರಾಮ ಕುಡಿಯುವ ನೀರು ಯೋಜನೆಯಡಿ ಕೊಳವೆಗಳನ್ನು ಅಳವಡಿಸಲು ಅರಣ್ಯ ಪ್ರದೇಶ ಇರುವ ಕಾರಣ ವಿಳಂಬವಾಗಿದೆ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದಾಗ, ಈ ಸಂಬಂಧ ಅರಣ್ಯ ಸಚಿವರು ಹಾಗೂ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಶೀಘ್ರದಲ್ಲಿ ಬೆಂಗಳೂರಿನಲ್ಲಿ ಸಭೆ ಕರೆದು ಸಮಸ್ಯೆ ಪರಿಹರಿಸುವುದಾಗಿ ತಿಳಿಸಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರುಗಳಾದ ಸಂಗಮೇಶ್, ಶಾರದಾ ಪೂರ್ಯಾನಾಯಕ್, ಬಿಲ್ಕಿಶ್ ಭಾನು, ಆಯುಕ್ತರಾದ ವೈ.ಎಸ್. ಪಾಟೀಲ್, ಶಿವಮೊಗ್ಗ ಜಿ.ಪಂ. ಸಿಇ.ಓ ರಿಷಿ ಆನಂದ್, ವಿಬಿಜಿ ರಾಮ್ ಜಿ ನಿರ್ದೇಶಕ ದಿಡ್ಡಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಗ್ರಾಮೀಣರ ಅಗತ್ಯ ಪೂರೈಕೆ ಪಂಚಾಯತಿ ಕರ್ತವ್ಯ: ಗ್ರಾಮೀಣ ಜನರ ನಿರೀಕ್ಷೆಯಂತೆ ನೀರು ಪೂರೈಸಬೇಕಾದ್ದು ಪಂಚಾಯತಿ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯ ಎಂದವರು ನುಡಿದರು.
ಗ್ರಾಮೀಣ ಜನರಿಗೆ ಉತ್ತಮ ರಸ್ತೆ, ಕುಡಿಯುವ ನೀರು, ಬೀದಿದೀಪ, ನೈರ್ಮಲ್ಯ ಕಾಪಾಡಬೇಕಾದ್ದು ಇಲಾಖೆಯ ಕರ್ತವ್ಯ. ಈ ನಿಟ್ಟಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಗ್ರಾಮೀಣ ಜನರ ಆಸ್ತಿಗೆ ಸಂಬಂಧಿಸಿದಂತೆ ಇ-ಸ್ವತ್ತು ನೀಡುವುದು ಕೂಡ ಪಂಚಾಯತಿಗಳ ಜವಾಬ್ದಾರಿಯಾಗಿದೆ. ಆದರೆ ಅನಗತ್ಯವಾಗಿ ವಿಳಂಬವಾಗುತ್ತಿರುವ ದೂರುಗಳು ಬರುತ್ತಿದ್ದು, ಜನರು ಪಂಚಾಯತಿ ಕಚೇರಿಗಳಿಗೆ ಅಲೆದಾಡದಂತೆ ಅವರಿಗೆ ಸೇವೆಗಳನ್ನು ಒದಗಿಸುವಂತೆ ಸಚಿವರು ನಿರ್ದೇಶನ ನೀಡಿದ ಅವರು,
ರಾಜ್ಯದ ಶೇ.60ರಷ್ಟು ಜನರು ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಸುಮಾರು ನಾಲ್ಕೂವರೆ ಕೋಟಿ ಜನರಿಗೆ ಸೇವೆ ಸಲ್ಲಿಸುವ ಅವಕಾಶ ಪಂಚಾಯತಿ ಅಧಿಕಾರಿ, ಸಿಬ್ಬಂದಿಗೆ ಲಭಿಸಿದೆ. ಸೇವಾ ಮನೋಭಾವದಿಂದ ಮತ್ತು ದಕ್ಷತೆಯಿಂದ ಕೆಲಸ ಮಾಡಿದರೆ ಜನರೂ ಮೆಚ್ಚುತ್ತಾರೆ. ಸರ್ಕಾರಕ್ಕೂ ಒಳ್ಳೆಯ ಹೆಸರು ಬರುತ್ತದೆ ಎಂದರು.
ವಾರಕ್ಕೆ 2 ದಿನ ಜಿಲ್ಲಾ ಪಂಚಾಯತ್ ಉಪವಾಸ ಕಾರ್ಯದರ್ಶಿಗಳ ಗ್ರಾಮ ಭೇಟಿ ಕಡ್ಡಾಯ:
ಪ್ರಗತಿ ಪರಿಶೀಲನೆಯ ವೇಳೆ ಸಾಗರ ತಾಲೂಕಿನ ಕಲ್ಮನೆ ಗ್ರಾಮ ಪಂಚಾಯತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕಚೇರಿಗೆ ಬಂದಿರುವ ದೂರಿನ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಪಂಚಾಯತಿಗಳಲ್ಲಿ ಕೆಲಸ ನಡೆಯುತ್ತಿದೆಯೇ. ಗ್ರಾಮಗಳಲ್ಲಿ ಏನು ಸಮಸ್ಯೆ ಇದೆ ಎಂದು ಪ್ರತ್ಯಕ್ಷ ತಿಳಿಯಲು ಗ್ರಾಮೀಣಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿಗಳು ಕಡ್ಡಾಯವಾಗಿ ವಾರದಲ್ಲಿ 2 ದಿನ ಗ್ರಾಮ ಪ್ರವಾಸ ಮಾಡಿ ಜನರ ಸಮಸ್ಯೆ ಆಲಿಸುವಂತೆ ಮತ್ತು ಭೇಟಿಯ ವರದಿಯನ್ನು ಸಿಇಓಗೆ ಸಲ್ಲಿಸುವಂತೆ ಸೂಚಿಸಿದರು.
ದಿನದ 24 ಗಂಟೆಯೊಳಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿ :
ಧಡಮಘಟ್ಟ ಗ್ರಾಮಕ್ಕೆ 24 ಗಂಟೆಯಲ್ಲಿ ನೀರು ಪೂರೈಸದಿದ್ದರೆ ಕ್ರಮ: ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಆದರೆ 24 ಗಂಟೆಯೊಳಗೆ ಕ್ರಮ ವಹಿಸದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಕೊಳವೆ ಬಾವಿ ಕೊರೆದ ಬಳಿಕ ವಿಳಂಬ ಮಾಡದೆ ಪಂಪ್ ಸೆಟ್ ಅಳವಡಿಸಿ, ವಿದ್ಯುತ್ ಸಂಪರ್ಕ ಒದಗಿಸಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಭದ್ರಾವತಿಯ ದಡಮಮಘಟ್ಟ ಗ್ರಾಮ ಪಂಚಾಯತಿಯಲ್ಲಿ ನೀರಿನ ಸಮಸ್ಯೆ ಇರುವ ಬಗ್ಗೆ ಶಾಸಕ ಸಂಗಮೇಶ್ ಗಮನಕ್ಕೆ ತಂದಾಗ ಪಿಡಿಓ ಮತ್ತು ಗ್ರಾಮೀಣ ನೀರು ಪೂರೈಕೆ ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, 24 ಗಂಟೆಯೊಳಗೆ ನೀರು ಪೂರೈಕೆ ಮಾಡದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆ ಮಾಡಿ ಶಿಸ್ತುಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.
