ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲೇ ಕಾಂಗ್ರೆಸ್ ಮುಖಂಡರೊಬ್ಬರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕು ಆಡಳಿತದ ವತಿಯಿಂದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಮುಖಂಡ ಜೈಕರ ಶೆಟ್ಟಿ ಅವರು ಎದ್ದು ನಿಂತು ತಮ್ಮ ಅಸಮಾಧಾನ ಹೊರಹಾಕಿದರು.
ವಾಲ್ಮೀಕಿ ಜಯಂತಿಯನ್ನು ತಾಲೂಕು ಆಡಳಿತ ಕಾಟಾಚಾರಕ್ಕೆ ಆಚರಿಸುತ್ತಿದೆಯೇ ಎಂದು ಪ್ರಶ್ನಿಸಿದ ಅವರು, ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಎಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದರೂ, ತಾಲೂಕು ಪಂಚಾಯಿತಿಯ ಒಬ್ಬ ಸಿಬ್ಬಂದಿಯೂ ಕಾರ್ಯಕ್ರಮದಲ್ಲಿ ಹಾಜರಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.
ಇನ್ನು, ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ಆಯೋಜಿಸಿದ್ದರೂ, ಸಭಾಂಗಣದಲ್ಲಿ ಜನರೇ ಇಲ್ಲದ ವೇದಿಕೆಯಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕನಿಷ್ಠ ಗೌರವವನ್ನಾದರೂ ನೀಡಬೇಕಲ್ಲವೇ? ಕಾಟಾಚಾರಕ್ಕೆ ಸನ್ಮಾನ ಮಾಡುವುದಾದರೆ ಅಂತಹ ಕಾರ್ಯಕ್ರಮ ನಡೆಸಬೇಡಿ ಎಂದು ಜೈಕರ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.
ಈ ವೇಳೆ ವೇದಿಕೆಯ ಮೇಲಿದ್ದ ಅಧಿಕಾರಿಗಳನ್ನು ಪ್ರಶ್ನಿಸಿ, ಕಾರ್ಯಕ್ರಮದ ಆಯೋಜನೆಯ ಕುರಿತು ತರಾಟೆಗೆ ತೆಗೆದುಕೊಂಡರು.
