ಸಕ್ಕರೆ ಕನಿಷ್ಠ ಮಾರಾಟ ಬೆಲೆ (ಎಂಎಸ್ಪಿ) ಹೆಚ್ಚಳವಾಗದೆ ಸಕ್ಕರೆ ಕಾರ್ಖಾನೆ ಮಾಲೀಕರು ಹೆಚ್ಚುವರಿ ಹಣ ನೀಡಲು ಒಪ್ಪುತ್ತಿಲ್ಲ. ಹೀಗಾಗಿ ಕಬ್ಬು ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಸಹಕಾರ ಅಗತ್ಯವಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಬೇಡಿಕೆಗಳು ನ್ಯಾಯಯುತವಾಗಿವೆ. ಡೀಸೆಲ್, ರಸಗೊಬ್ಬರ ಮತ್ತು ಕೀಟನಾಶಕಗಳ ಬೆಲೆ ಏರಿಕೆಯಾಗಿದ್ದರೂ ಸಕ್ಕರೆ ಬೆಲೆಯಲ್ಲಿ ನಿರೀಕ್ಷಿತ ಏರಿಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಖಾನೆ ಮಾಲೀಕರ ಸಮಸ್ಯೆಗಳನ್ನೂ ಪರಿಗಣಿಸಬೇಕಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ರಚಿಸಿರುವ ಸಮಿತಿ ಅಕ್ಟೋಬರ್ 29ರಂದು ರಾಜ್ಯಕ್ಕೆ ಆಗಮಿಸಲಿದ್ದು, ಸಮಿತಿಯೊಂದಿಗೆ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಕಬ್ಬು ಅರೆಯುವ ಪ್ರಕ್ರಿಯೆ ಆರಂಭಿಸಲು ರೈತರು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ ಮುಖ್ಯಮಂತ್ರಿ, ಮಹಾರಾಷ್ಟ್ರದಲ್ಲಿ ಈಗಾಗಲೇ ಕಬ್ಬು ಅರೆಯುವಿಕೆ ಆರಂಭವಾಗಿದೆ. ರಾಜ್ಯದ ಕಬ್ಬು ಮಹಾರಾಷ್ಟ್ರಕ್ಕೆ ಸಾಗುವ ಪರಿಸ್ಥಿತಿ ನಿರ್ಮಾಣವಾಗಬಾರದು. ಇದರಿಂದ ರಾಜ್ಯದ ರೈತರು ಹಾಗೂ ಸರ್ಕಾರಕ್ಕೆ ತೊಂದರೆಯಾಗಬಹುದು ಎಂದು ಎಚ್ಚರಿಸಿದರು.
ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಚರ್ಚಿಸುವುದರ ಜೊತೆಗೆ, ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದು, ಕೇಂದ್ರ ಸಚಿವರೊಂದಿಗೂ ಮಾತುಕತೆ ನಡೆಸಲಾಗುವುದು. ರಾಜ್ಯದ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಕೇಂದ್ರದ ಮೇಲೆ ಒತ್ತಡ ಹೇರಬೇಕಿದೆ ಎಂದು ಹೇಳಿದರು.
ಕಳೆದ ವರ್ಷ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಪ್ರತಿ ಟನ್ ಕಬ್ಬಿಗೆ ₹300 ನೀಡುವ ಕುರಿತು ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ಸ್ಮರಿಸಿದ ಅವರು, ರೈತರ ಬೇಡಿಕೆಗಳಲ್ಲಿನ ನ್ಯಾಯವನ್ನು ಸರ್ಕಾರ ಅರ್ಥಮಾಡಿಕೊಂಡಿದೆ. ಆದರೆ, ಸಕ್ಕರೆ ಉತ್ಪಾದನೆ ಮತ್ತು ಕಬ್ಬಿನ ಇಳುವರಿ ಕುಸಿತ ಸೇರಿದಂತೆ ಹಲವು ಸಮಸ್ಯೆಗಳಿವೆ. ಸಕ್ಕರೆ ಎಂಎಸ್ಪಿ ಹೆಚ್ಚಳವಾದರೆ ರೈತರಿಗೆ ಹೆಚ್ಚಿನ ಹಣ ನೀಡಲು ಸಿದ್ಧವಿರುವುದಾಗಿ ಕಾರ್ಖಾನೆ ಮಾಲೀಕರು ತಿಳಿಸಿದ್ದಾರೆ ಎಂದರು.
ರೈತರ ಹೋರಾಟಕ್ಕೆ ಗೌರವ ನೀಡಿ ಕಿತ್ತೂರಿನಲ್ಲಿ ರೈತರನ್ನು ಭೇಟಿಯಾಗಿ ಚರ್ಚಿಸಿದ್ದೇನೆ. ರೈತರ ಪರವಾಗಿ ಸರ್ಕಾರ ವಾದಿಸಲು ಸಿದ್ಧವಿದೆ. ಆದರೆ, ಸರ್ಕಾರದ ಆರ್ಥಿಕ ಪರಿಸ್ಥಿತಿಯನ್ನೂ ಅರ್ಥಮಾಡಿಕೊಳ್ಳಬೇಕು. ರಾಜಕೀಯ ಆರೋಪ-ಪ್ರತ್ಯಾರೋಪಗಳಿಂದ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.
