ಸದಾಶಿವಪುರ ವ್ಯಾಪ್ತಿಯ ಹಕ್ಕಿಪಿಕ್ಕಿ ಕ್ಯಾಂಪ್ (ಕಾಲೋನಿ) ಆಶ್ರಮ ಶಾಲೆಗೆ ಸಚಿವ ರಘುಮೂರ್ತಿ ಭೇಟಿ ನೀಡಿ ಶಾಲೆಯಲ್ಲಿನ ಸೌಲಭ್ಯಗಳು, ಸ್ವಚ್ಛತೆ ಹಾಗೂ ನಿರ್ವಹಣಾ ವ್ಯವಸ್ಥೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲ ಗಿರೀಶ್ ಅವರಿಂದ ವಿದ್ಯಾರ್ಥಿಗಳ ಹಾಜರಾತಿ, ಬೋಧನಾ ವಿಧಾನ, ಶೈಕ್ಷಣಿಕ ಪ್ರಗತಿ ಹಾಗೂ ಶಾಲೆಯ ಕಾರ್ಯನಿರ್ವಹಣೆಯ ಕುರಿತು ಮಾಹಿತಿ ಪಡೆದರು.
ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮಧ್ಯಾಹ್ನದ ಬಿಸಿಯೂಟದ ಗುಣಮಟ್ಟದ ಬಗ್ಗೆ ವಿಶೇಷವಾಗಿ ವಿಚಾರಿಸಿದ ಸಚಿವರು, ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಹಾಗೂ ಸ್ವಚ್ಛವಾದ ಆಹಾರ ಒದಗಿಸಬೇಕು ಎಂದು ಸೂಚಿಸಿದರು. ಆಹಾರ ತಯಾರಿಸುವ ಸ್ಥಳ ಮತ್ತು ಊಟದ ವ್ಯವಸ್ಥೆಯಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.
ಅಲ್ಲದೆ, ಮಕ್ಕಳಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಪೂರೈಸಬೇಕು. ಶಾಲೆಯ ಆವರಣ, ತರಗತಿ ಕೊಠಡಿಗಳು, ವಸತಿ ಕೊಠಡಿಗಳು ಹಾಗೂ ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಕ್ಕಳ ಕಲಿಕೆಗೆ ಪೂರಕವಾದ ಆರೋಗ್ಯಕರ ವಾತಾವರಣ ನಿರ್ಮಿಸಬೇಕು. ಸ್ವಚ್ಛತೆ ಮತ್ತು ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯ ತೋರಬಾರದು ಎಂದು ಸಚಿವರು ಎಚ್ಚರಿಕೆ ನೀಡಿದರು.
ಮಕ್ಕಳ ಶಿಕ್ಷಣ, ಆರೋಗ್ಯ, ಪೌಷ್ಟಿಕತೆ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
