ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಹೊಸ ಸೇತುವೆ ಬಳಿ ನಡೆದಿದೆ.
ನಾಪತ್ತೆಯಾದ ಯುವಕರನ್ನು ದಾವಣಗೆರೆ ಮೂಲದ ಶಿವು (22) ಹಾಗೂ ರುದ್ರೇಶ್ (24) ಎಂದು ಗುರುತಿಸಲಾಗಿದೆ. ಗಾರೆ ಕೆಲಸಕ್ಕಾಗಿ ತೀರ್ಥಹಳ್ಳಿಗೆ ಬಂದಿದ್ದ ಇಬ್ಬರು ಯುವಕರು ಸೋಮವಾರ ಸಂಜೆ ಈಜಲು ತುಂಗಾ ನದಿಗೆ ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಘಟನೆ ತಿಳಿದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಶೋಧ ಕಾರ್ಯ ಆರಂಭಿಸಿದ್ದರು. ಆದರೆ, ರಾತ್ರಿ ಕತ್ತಲಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಅಡಚಣೆ ಉಂಟಾಗಿ ಶೋಧ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು.
ಇಂದು ಬೆಳಗ್ಗೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಇಬ್ಬರು ಯುವಕರಿಗಾಗಿ ಮತ್ತೆ ಶೋಧ ಕಾರ್ಯ ಮುಂದುವರಿಸಿದ್ದಾರೆ.
