ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಪುತ್ರಿ ಶ್ರೇಯಾ ಎನ್. ಗೌಡ ಅವರು ಯುಪಿಎಸ್ಸಿ ನಡೆಸಿದ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪರೀಕ್ಷೆಯಲ್ಲಿ ಮಹಿಳಾ ವಿಭಾಗದಲ್ಲಿ ದೇಶಕ್ಕೆ ಪ್ರಥಮ ರ್ಯಾಂಕ್ ಪಡೆಯುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಭದ್ರಾವತಿ ತಾಲೂಕಿನ ತಿಮ್ಮಾಪುರ ಗ್ರಾಮದವರಾದ ಶ್ರೇಯಾ ಅವರು ಮೊದಲ ಪ್ರಯತ್ನದಲ್ಲೇ ಈ ಮಹತ್ವದ ಯಶಸ್ಸು ಗಳಿಸಿದ್ದು, ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಬಾಲ್ಯದಿಂದಲೂ ಭಾರತೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುವ ಕನಸು ಹೊಂದಿದ್ದ ಶ್ರೇಯಾ, ತಮ್ಮ ನಿರಂತರ ಪರಿಶ್ರಮ, ಶಿಸ್ತು ಮತ್ತು ದೃಢಸಂಕಲ್ಪದಿಂದ ಈ ಸಾಧನೆ ಮಾಡಿದ್ದಾರೆ. ಅವರ ಯಶಸ್ಸು ರಾಜ್ಯದ ಯುವಜನತೆಗೆ, ವಿಶೇಷವಾಗಿ ಹೆಣ್ಣುಮಕ್ಕಳಿಗೆ ದೊಡ್ಡ ಪ್ರೇರಣೆಯಾಗಿದೆ.
ಇನ್ನು ಮಗಳ ಕನಸಿಗೆ ಸದಾ ಬೆಂಬಲವಾಗಿ ನಿಂತು ಪ್ರೋತ್ಸಾಹಿಸಿದ ತಂದೆ ನಾಗೇಂದ್ರ ಜೆ. ಹಾಗೂ ತಾಯಿ ಡಾ. ಆಶಾ ಬಿ.ಎಂ. ಅವರ ಪಾತ್ರವೂ ಮೆಚ್ಚುಗೆಗೆ ಪಾತ್ರವಾಗಿದೆ.
ಶ್ರೇಯಾ ಅವರ ಈ ಸಾಧನೆಗೆ ಜಿಲ್ಲೆಯಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದ್ದು, ಭಾರತೀಯ ಸಶಸ್ತ್ರ ಪಡೆಗಳಲ್ಲಿ ಉಜ್ವಲ ಭವಿಷ್ಯ ರೂಪಿಸಿಕೊಂಡು ದೇಶಸೇವೆಯಲ್ಲಿ ತೊಡಗಲಿ ಎಂಬ ಹಾರೈಕೆ ವ್ಯಕ್ತವಾಗಿದೆ.
