ಶಿವಮೊಗ್ಗ ತಾಲೂಕಿನ ಈಚವಾಡಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಸಾವನ್ನಪ್ಪಿದ್ದ ಸ್ಥಳದಲ್ಲೇ ಮತ್ತೊಂದು ಕಾಡಾನೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.
ಕಾಡಾನೆ ರಸ್ತೆ ಪಕ್ಕದಲ್ಲೇ ಗಂಭೀರವಾಗಿ ನಿಂತಿರುವುದು ಕಂಡುಬಂದಿದ್ದು, ವಾಹನ ಸವಾರರು ಹಾಗೂ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ಎರಡು ದಿನಗಳಿಂದ ಅರಣ್ಯಾಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟು ನಿರಂತರ ಕಣ್ಗಾವಲು ನಡೆಸುತ್ತಿದ್ದಾರೆ.
ಈ ಹಿಂದೆ ಇದೇ ಸ್ಥಳದಲ್ಲಿ ಕಾಡಾನೆ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಇದೀಗ ಮತ್ತೊಂದು ಆನೆ ಕಾಣಿಸಿಕೊಂಡಿರುವುದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಯನ್ನು ಸುರಕ್ಷಿತವಾಗಿ ಮರಳಿ ಅರಣ್ಯಕ್ಕೆ ಅಟ್ಟಲು ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ಈಚವಾಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ರಸ್ತೆ ಪಕ್ಕದಲ್ಲಿ ಆನೆ ಕಾಣಿಸಿಕೊಂಡಿರುವುದರಿಂದ ವಾಹನ ಸವಾರರು ಕೂಡ ಜಾಗರೂಕತೆಯಿಂದ ಸಂಚರಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.
