ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬೇಗೂರು ಗ್ರಾಮದಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ಭೀಕರ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಬೇಗೂರು ಗ್ರಾಮದ ಕಿರಣ್ (28) ಎಂಬ ಯುವಕನ ಮೇಲೆ ಬಾವಿಕಟ್ಟೆ ಮಹೇಶ್ವರಪ್ಪ ಅವರ ಕುಟುಂಬಸ್ಥರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಗುದ್ದಲಿ ಹಾಗೂ ಮರದ ತುಂಡುಗಳಿಂದ ಯುವಕನ ಮೇಲೆ ಮನಬಂದಂತೆ ಹಲ್ಲೆ ನಡೆಸಲಾಗಿದ್ದು, ಬಳಿಕ ಕಾಲಿನ ಮೇಲೆ ಕಲ್ಲು ಎತ್ತಿಹಾಕಿ ಕ್ರೌರ್ಯ ಮೆರೆದಿದ್ದಾರೆ ಎನ್ನಲಾಗಿದೆ.
ಈ ಭೀಕರ ಹಲ್ಲೆಯಿಂದ ಕಿರಣ್ ಅವರ ಕಾಲು ಮುರಿದಿದ್ದು, ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಗಾಯಾಳು ಕಿರಣ್ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
