Rotary Shivamogga ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸುವ ಉದ್ದೇಶದಿಂದ ರೋಟರಿ ಶಿವಮೊಗ್ಗ ಈಸ್ಟ್ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ನಗರದ ರಾಜೇಂದ್ರ ನಗರದ ರೋಟರಿ ಈಸ್ಟ್ ಇಂಗ್ಲಿಷ್ ಹೈ ಸ್ಕೂಲ್‌ನಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಇಂದು ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ಮಕ್ಕಳ ದಿನಾಚರಣೆಯ ಅಂಗವಾಗಿ ವಿವಿಧ ಮನರಂಜನಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದರು.
ಕಾರ್ಯಕ್ರಮದಲ್ಲಿ ಮಕ್ಕಳಿಗೆ ಶುಭಾಶಯಗಳನ್ನು ತಿಳಿಸಿ, ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಲಾಯಿತು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಅವರಲ್ಲಿರುವ ಪ್ರತಿಭೆ, ಆಸಕ್ತಿ ಹಾಗೂ ಸೃಜನಶೀಲತೆಗೆ ಸೂಕ್ತ ವೇದಿಕೆ ಕಲ್ಪಿಸುವುದು ಅಗತ್ಯ. ಇಂದಿನ ಮಕ್ಕಳು ನಾಳಿನ ಉತ್ತಮ ನಾಗರಿಕರಾಗಿದ್ದು, ಅವರ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರು ಮತ್ತು ಪೋಷಕರು ಪ್ರೋತ್ಸಾಹ ನೀಡಬೇಕು ಎಂಬ ಆಶಯ ವ್ಯಕ್ತವಾಯಿತು.
Rotary Shivamogga ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಪೂರ್ವ ಆಂಗ್ಲ ಶಾಲೆಯ ಅಧ್ಯಕ್ಷರಾದ ಕೆ.ಬಿ. ರವಿಶಂಕರ್ ಮಾತನಾಡಿ, ಮಕ್ಕಳನ್ನು ಸುಸಂಸ್ಕೃತರನ್ನಾಗಿ ಮಾಡಿ, ಜೀವನ ಕೌಶಲ್ಯವನ್ನು ಕಲಿಸುವುದು ಅವಶ್ಯಕವಾಗಿದೆ ಎಂದು ಹೇಳಿದರು.
ಕಾರ್ಯದರ್ಶಿ ಎಸ್.ಸಿ.ರಾಮಚಂದ್ರ ಮಾತನಾಡಿ, ಮಕ್ಕಳ ದಿನಾಚರಣೆ ಕೇವಲ ಆಟ-ಪಾಠ ಮತ್ತು ಸಿಹಿ ತಿನ್ನುವ ದಿನವಲ್ಲ; ಪ್ರತಿಯೊಬ್ಬ ಮಗುವಿಗೂ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷಿತ ಬಾಲ್ಯ ಸಿಗಬೇಕು ಎಂಬ ಜಾಗೃತಿ ಮೂಡಿಸುವ ದಿನವೂ ಹೌದು. ನಮಗೆ ಇಷ್ಟು ಪ್ರೀತಿ, ಕಾಳಜಿ ಮತ್ತು ಮಾರ್ಗದರ್ಶನ ನೀಡುತ್ತಿರುವ ನಮ್ಮ ಪೋಷಕರಿಗೆ ಹಾಗೂ ಗುರುಗಳಿಗೆ ನಾವು ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸೋಣ ಎಂದರು.
ಕಾರ್ಯಕ್ರಮದಲ್ಲಿ ರೋಟರಿ ಪೂರ್ವ ಆಂಗ್ಲ ಶಾಲೆಯ ಸೂರ್ಯನಾರಾಯಣ ಆರ್. ಪ್ರಾಸ್ತಾವಿಕ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ಪೂರ್ವ ಶಾಲೆಯ ಉಪಾಧ್ಯಕ್ಷರಾದ ನಾಗವೇಣಿ ಎಸ್.ಆರ್., ಇಂಟರಾಕ್ಟ್ ಕ್ಲಬ್ ನ ಅಧ್ಯಕ್ಷರಾದ ಧನುಷ್, ಕಾರ್ಯದರ್ಶಿ ನಿಖಿಲ್, ಶಿಕ್ಷಕರಾದ ವಿದ್ಯಾ, ಅರ್ಚನಾ, ಹರ್ಷಿತಾ, ರೂಪಾ ರಾವ್, ರೂಪಾ ಎಸ್.ಸಿ., ಸಂಸ್ಥೆಯ ಪದಾಧಿಕಾರಿಗಳು, ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಕ್ಕಳ ಉತ್ಸಾಹಭರಿತ ಪಾಲ್ಗೊಳ್ಳುವಿಕೆಯಿಂದ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
