S. N. Channabasappa “ಬಡ ಫಲಾನುಭವಿಗಳಿಗೆ ಸ್ವಂತ ಸೂರು ಕಲ್ಪಿಸುವ ಆಶ್ರಯ ಯೋಜನೆಯಲ್ಲಿ ಗುತ್ತಿಗೆದಾರರು, ಬ್ಯಾಂಕ್ ಅಥವಾ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಗೋಪಿಶೆಟ್ಟಿಕೊಪ್ಪ ಆಶ್ರಯ ಯೋಜನೆ ಸ್ಥಗಿತಗೊಳ್ಳಲು ಕಾರಣರಾದ ಗುತ್ತಿಗೆದಾರರನ್ನು ತಕ್ಷಣವೇ ಕಪ್ಪುಪಟ್ಟಿಗೆ (Blacklist) ಸೇರಿಸಲು ಕ್ರಮ ಕೈಗೊಳ್ಳಬೇಕು,” ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ನಡೆದ ಆಶ್ರಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾಸಕರು, 7೦ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಸಭೆಯ ಕೊನೆಯಲ್ಲಿ ಫಲಾನುಭವಿಗಳಿಗೆ ಮನೆಯ ಕೀಗಳನ್ನು ಹಸ್ತಾಂತರಿಸಿ ಶುಭ ಹಾರೈಸಿದರು.
ಸಭೆಯ ಪ್ರಮುಖ ನಿರ್ಣಯಗಳು:
ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ: ಗೋಪಿಶೆಟ್ಟಿಕೊಪ್ಪ ಆಶ್ರಯ ಯೋಜನೆಯು ಗುತ್ತಿಗೆದಾರರ ನಿರ್ಲಕ್ಷ್ಯದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಕುರಿತು ಸಭೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಈ ವಿಚಾರವನ್ನು ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆ ಪುನರಾರಂಭಿಸಲು ನಿರ್ಧರಿಸಿದರು. ಅಲ್ಲದೆ, ನಿರ್ಲಕ್ಷ್ಯ ತೋರಿದ ಹಾಲಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸೂಚಿಸಿದರು.
ಬ್ಯಾಂಕ್ ಸಾಲದ ಸಮಸ್ಯೆಗೆ ಪರಿಹಾರ: ಗೋವಿಂದಪುರ ಆಶ್ರಯ ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್ಗಳಿಂದ ಆಗುತ್ತಿರುವ ನಿರ್ಲಕ್ಷ್ಯ ಧೋರಣೆ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಸೂಚಿಸಲಾಯಿತು.
S. N. Channabasappa ಇ-ಸ್ವತ್ತು ವಿತರಣೆಗೆ ಸೂಚನೆ: ಫಲಾನುಭವಿಗಳಿಗೆ ಗ್ರಾಮ ಪಂಚಾಯಿತಿಯಿಂದ ಇ-ಸ್ವತ್ತು ನೀಡುವಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ ದಾಖಲೆಗಳನ್ನು ಒದಗಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ ಎಸ್ ಅರುಣ್, ಶ್ರೀಮತಿ ಬಲ್ಕೀಶ್ ಬಾನು, ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಮಾಯಣ್ಣ ಗೌಡ ಸೇರಿದಂತೆ ಆಶ್ರಯ ಸಮಿತಿಯ ಸದಸ್ಯರು, ಪಾಲಿಕೆ ಅಧಿಕಾರಿಗಳು, ಬ್ಯಾಂಕ್ ಪ್ರತಿನಿಧಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
